“ಉದ್ಯೋಗಮೇಳಕ್ಕೆ ನಿರೀಕ್ಷೆಗೂ ಮೀರಿ ಸ್ಪಂದನೆ” : ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

BI ಬಿಜಾಪುರ : ನಗರದ ಐಟಿಐ ಕಾಲೇಜ ಆವರಣದಲ್ಲಿ ಇದೇ ಫೆಬ್ರವರಿ 28 ಹಾಗೂ 29 ರಂದು ನಡೆಯಲಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ ನಿರೀಕ್ಷೆಗೂ ಮೀರಿ ಪ್ರತಿಕ್ರಿಯೆ ಬಂದಿದ್ದು, ಸುಮಾರು 6500ಕ್ಕೂ ಅಧಿಕ ಅಭ್ಯರ್ಥಿಗಳು ಹಾಗೂ 70ಕ್ಕೂ ಹೆಚ್ಚು ಕಂಪನಿಗಳು ನೋಂದಣಿ ಮಾಡಿಕೊಂಡಿವೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ಸಭಾಭವನದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಉದ್ಯೋಗ ಮೇಳದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉದ್ಯೋಗ ಮೇಳಕ್ಕೆ ಭಾಗವಹಿಸುವವರು ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಫೆ.27 ಸಂಜೆಯವರೆಗೆ ಕಾಲಾವಕಾಶ ಲಭ್ಯವಿದ್ದು, ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡ ಅಭ್ಯರ್ಥಿಗಳು ದಿನಾಂಕ 28 ರಂದು ಸಂದರ್ಶನದಲ್ಲಿ ಭಾಗಿಯಾಗಬಹುದಾಗಿದೆ ಎಂದು ಹೇಳಿದರು.

ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳದ ಅಭ್ಯರ್ಥಿಗಳು ಇದೇ ಫೆಬ್ರುವರಿ 28 ರಂದು ನೇರವಾಗಿ ನೊಂದಣಿ ಮಾಡಿಕೊಳ್ಳಬಹುದಾಗಿದ್ದು, ಫೆ,29 ರಂದು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಸಂದರ್ಶನಕ್ಕೆ ಭಾಗಿಯಾಗುವ ಅಭ್ಯರ್ಥಿಗಳಿಗೆ ಹಾಗೂ ಕಂಪನಿಗಳಿಗೆ ವಿವಿಧ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.

ಉದ್ಯೋಗಮೇಳದಲ್ಲಿ ಭಾಗವಹಿಸುವ ಕಂಪನಿಗಳಿಗೆ ಸ್ಟಾಲ್‌ಗಳ ವ್ಯವಸ್ಥೆಯನ್ನು ಮಾಡಲಾಗಿದ್ದು, ಆನ್‌ಲೈನ್‌ನಲ್ಲಿ ನೊಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳು ಎಸ್.ಎಂ.ಎಸ್ ನಲ್ಲಿ ಕಳುಹಿಸಲಾದ ಸಂಖ್ಯೆಯ ಸ್ಟಾಲ್‌ಗಳಿಗೆ ಭೇಟಿ ನೀಡಿ ಸಂದರ್ಶನ ನೀಡಬಹುದಾಗಿದೆ ಎಂದರು.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಊಟ-ಉಪಹಾರ ವ್ಯವಸ್ಥೆ, ಕುಡಿಯುವ ನೀರು ಹಾಗೂ ಸಂವಹನದಲ್ಲಿ ತೊಂದರೆಗಳಾಗದಂತೆ ನೋಡಿಕೊಳ್ಳಬೇಕು, ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಮುಖ್ಯ ವೇದಿಕೆ, ಶಾಮಿಯಾನ, ಉದ್ಯೋಗದಾತರಿಗೆ ಪ್ರಮಾಣ ಪತ್ರ, ಉದ್ಯೋಗದಾತರಿಗೆ ವಸತಿ ಸೌಲಭ್ಯ, ಆಗಮಿಸುವ ಅಭ್ಯರ್ಥಿಗಳಿಗೆ ಸೂಕ್ತ ಮಾಹಿತಿ ವ್ಯವಸ್ಥೆ, ಸ್ವಯಂ ಸೇವಕರ ಹಾಗೂ ಮೇಲ್ವಿಚಾರಕರ ನಿಯೋಜನೆ ಸೇರಿದಂತೆ ಯಾವುದೇ ರೀತಿಯ ತೊಂದರೆಗಳಾಗದಂತೆ ಕಾರ್ಯ ನಿರ್ವಹಿಸಲು ಸಂಬಂಧಪಟ್ಟ ವಿವಿಧ ಉಪ ಸಮಿತಿಯ ಅಧಿಕಾರಿಗಳಿಗೆ ಸೂಚಿಸಿದರು.

ಅದರಂತೆ ಮುಖ್ಯ ಸಮಾರಂಭದ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಅಭ್ಯರ್ಥಿಗಳಿಗಾಗಿ ಪ್ರೋತ್ಸಾಹ ಉಪನ್ಯಾಸ ಆಯೋಜಿಸಬೇಕು. ಐಟಿಐ ಕಾಲೇಜ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ, ಉದ್ಯೋಗ ಮೇಳ ಸಂದರ್ಭದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇನ್ನಿತರ ಅವಶ್ಯಕತೆಗಳನ್ನು ಅಗತ್ಯಕ್ಕೆ ಅನುಗುಣವಾಗಿ ಪೂರೈಸಬೇಕು. ಮುಖ್ಯ ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅತಿಥಿ ಗಣ್ಯರನ್ನು ಆಹ್ವಾನಿಸುವಂತೆ ಅವರು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ರಮೇಶ ದೇಸಾಯಿ ಸೇರಿದಂತೆ ಇತರರಿದ್ದರು.

error: Content is protected !!